ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಕ್ರಮ ಸರಿಯೋ ತಪ್ಪೋ ಎಂದು ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಈಗಾಗಲೇ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಇಂದು ತೀರ್ಪು ಪ್ರಕಟಿಸಲಿದೆ. ನ್ಯಾ. ಎಂ. ನಾಗಪ್ರಸನ್ನ ಇಂದು ತೀರ್ಪು ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ಈ ತೀರ್ಪು ಸಿದ್ದರಾಮಯ್ಯಗೆ ರಾಜಕೀಯವಾಗಿಯೂ ಮಹತ್ವದ್ದಾಗಲಿದೆ.
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಅದರಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ವಿಚಾರ ರಾಜಕೀಯವಾಗಿ ಸಾಕಷ್ಟು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಈ ನಡುವೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದರೆ ಅವರ ಕುರ್ಚಿಗೆ ಕಂಟಕ ಬರುವ ಅಪಾಯವೂ ಇದೆ. ಹೀಗಾಗಿ ಸಿದ್ದರಾಮಯ್ಯ ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ಈಗಾಗಲೇ ಮುಗಿದಿದ್ದು ಇಂದು ತೀರ್ಪು ಬರಲಿದೆ. ಈ ತೀರ್ಪು ಸಿದ್ದರಾಮಯ್ಯನವರ ಭವಿಷ್ಯ ನಿರ್ಧರಿಸಲಿದೆ.