ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಇದು ರಾಜ್ಯ ಸರ್ಕಾರ ಮಾಡಿರುವುದಲ್ಲ, ಕೆಎಂಎಫ್ ನ ನಿರ್ಧಾರ ಎಂದಿದ್ದಾರೆ. ಈ ಮೂಲಕ ಹಾಲಿನ ದರ ಏರಿಕೆಯಾದರೆ ನಾವೇನು ಮಾಡಕ್ಕಾಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ.
ನಾಳೆಯಿಂದ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಲಾಗಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಈಗ ಹಾಲಿನ ದರ ಏರಿಕೆ ಬರೆಹಾಕಿದಂತಾಗಿದೆ.
ಈ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಂದಿನಿ ಹಾಲಿನ ದರ ಹೆಚ್ಚಳ ಮಾಡಿರುವುದು ನಾವಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯೇ ಇದೆ. ಆದರೂ ದರ ಏರಿಕೆ ಮಾಡಿರುವುದರ ಬಗ್ಗೆ ಕೆಎಂಎಫ್ ಜೊತೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ರಾಜ್ಯದಲ್ಲೂ ಹೆಚ್ಚಳ ಮಾಡಲಾಗಿದೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ಸಮಜಾಯಿಷಿ ನೀಡಿದ್ದಾರೆ.