ಅತಿವೃಷ್ಟಿಯಿಂದ ಮನೆ, ಪ್ರಾಣಹಾನಿಯಾದ ಕುಟುಂಬಕ್ಕೆ ಇನ್ನು 48 ಗಂಟೆಯಲ್ಲಿ ಪರಿಹಾರ: ಸಿಎಂ ಸಿದ್ದರಾಮಯ್ಯ

Krishnaveni K

ಶನಿವಾರ, 26 ಅಕ್ಟೋಬರ್ 2024 (15:54 IST)
ಬೆಂಗಳೂರು: ರಾಜ್ಯದಲ್ಲಿ ಅತಿ ವೃಷ್ಟಿಯಿಂದಾಗಿ ಮನೆ ಹಾನಿ, ಪ್ರಾಣ ಹಾನಿಯಾದ ಸಂದರ್ಭದಲ್ಲಿ 48 ಗಂಟೆಗಳೊಳಗಾಗಿ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಅವರು ಇಂದು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

 
ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ  ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.  ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ಸೂಚಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ