ಬೆಂಗಳೂರು: 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಇಂದು ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಗೆ ಗ್ಯಾರಂಟಿ ನೀಡಿದ್ದಾರೆ.
ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಹೊಗಳಿದರು. ಬಳಿಕ ಮುಂದೆಯೂ ಪಂಚ ಗ್ಯಾರಂಟಿ ಯೋಜನೆಗಳು ನಿಸ್ಸಂಶಯವಾಗಿ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂಬ ಅನುಮಾನಗಳಿಗೆ ಉತ್ತರ ನೀಡಿದ್ದಾರೆ.
ತಮ್ಮ ಭಾಷಣದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದರು. ಬಜೆಟ್ ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಕರ್ತವ್ಯವಾಗಿದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಕೇಂದ್ರ ಈ ಆಶಯದಿಂದ ದೂರ ಸರಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ತಮ್ಮ ಪಾಲಿನ ತೆರಿಗೆ ಹಣವನ್ನು ರಾಜ್ಯಗಳಿಗೆ ನೀಡಲೂ ಮೀನ ಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಗ್ಯಾರಂಟಿ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಿದೆ. ಅನೇಕ ಬಡಕುಟುಂಬಗಳಿಗೆ ಇದರಿಂದ ಉಪಯೋಗವಾಗಿದೆ. ಗ್ಯಾರಂಟಿ ಯೋಜನೆಯಿಂದ ದಿವಾಳಿಯಾಗುತ್ತದೆ ಎಂದು ಟೀಕಿಸಿದವರಿಗೆ ಈ ಮೂಲಕ ಉತ್ತರ ನೀಡಿದ್ದೇವೆ. ಮುಂದಿನ ದಿನಗಳಲ್ಲಿಯೂ ಯೋಜನೆಗಳು ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ.