ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

Krishnaveni K

ಬುಧವಾರ, 6 ಆಗಸ್ಟ್ 2025 (18:23 IST)
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲನೆ ನಡೆಸಿದ್ದಾರೆ. ದಿಡೀರ್ ಆಗಿ ಸಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದು ಯಾಕೆ ಎಂದು ಅವರೇ ಸ್ವತಃ ಬಹಿರಂಗಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಕೊಪ್ಪಳದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ ಮಳೆ ಕಾರಣದಿಂದ ಸಿಎಂಗೆ ಅಲ್ಲಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೊನೆಯ ಕ್ಷಣದಲ್ಲಿ ಕೊಪ್ಪಳ ಭೇಟಿ ರದ್ದಾಗಿದೆ. ಈ ಸಮಯದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾಗಿ ಅವರು ಹೇಳಿದ್ದಾರೆ.

‘ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು.
ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆ. ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ. 120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ