ಬೆಳಗಾವಿ: ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ನಿದ್ದೆಗೆಡಿಸಿದೆ. ಅದಕ್ಕೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಇಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ.
ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ತೋರಿಸಿದೆ.
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ, ಇಂದು ನಾನೆ ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ನಾವು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಿದ್ದೇವೆ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ.
ಮುಖ್ಯಮಂತ್ರಿ ಹುದ್ದೆ ವಿಷಯ ನಮ್ಮ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ. ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಂಡರೆ ಸಾಕು ಎಂದಿದ್ದಾರೆ.