ಆಡಳಿತಕ್ಕೆ ಒಂದು ವರ್ಷ ಪೂರ್ತಿಯಾದ ಹಿನ್ನಲೆಯಲ್ಲಿ ಕಾರ್ಯಕರ್ತರ ಬಳಿಗೆ ಸಿಎಂ ಸಿದ್ದರಾಮಯ್ಯ

Krishnaveni K

ಬುಧವಾರ, 10 ಜುಲೈ 2024 (08:45 IST)
ಬೆಂಗಳೂರು: ತಮ್ಮ ಸರ್ಕಾರಕ್ಕೆ ಒಂದು ವರ್ಷ ಪೂರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರೊಂದಿಗೆ ಒಂದು ದಿನ ಕಾಲ ಕಳೆಯಲಿದ್ದಾರೆ. ಅದಕ್ಕೆ ಸಮಯ, ದಿನಾಂಕ ಕೂಡಾ ನಿಗದಿಯಾಗಿದೆ.

ಈ ಬಗ್ಗೆ ಕೆಪಿಸಿಸಿ ಪ್ರಕಟಣೆ ನೀಡಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕರಿಸಲು ಬರುವುದಾಗಿ ನಿಗದಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಈ ಕಾರ್ಯಕ್ರಮ ರದ್ದಾಯಿತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅಹವಾಲು ಸ್ವೀಕರಿಸಿದರು. ಇದರ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬಂದಿದ್ದವು.

ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ. ಇದೇ ಶನಿವಾರ ಅಂದರೆ ಜುಲೈ 13 ರಂದು ಈ ಕಾರ್ಯಕ್ರಮ ನಡೆಯಲಿದೆ. ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಭವನದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಹಾಗೂ ಅಹವಾಲುಗಳನ್ನು ಆಲಿಸಲಿರುವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು, ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸೂಚಿಸಿರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ