ಜಿಪಂ, ತಾಪಂ ಚುನಾವಣೆ ಫಲಿತಾಂಶ: ಫೆ.26 ರಂದು ದೆಹಲಿಗೆ ತೆರಳಿರುವ ಸಿಎಂ

ಬುಧವಾರ, 24 ಫೆಬ್ರವರಿ 2016 (14:25 IST)
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 26 ರಂದು ದೆಹಲಿಗೆ ತೆರಳುತ್ತಿದ್ದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಈಗಾಗಲೇ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ಸಚಿವ ಅರುಣ್ ಜೇಟ್ಲಿ, ಫೆಬ್ರವರಿ 29 ರಂದು ಕೇಂದ್ರ ಬಜೆಟ್ ಮಂಡಿಸುತ್ತಿರುವುದರಿಂದ ರಾಜ್ಯದ ಕೆಲ ಯೋಜನೆಗಳಿಗೆ ಆರ್ಥಿಕ ನೆರವು ಕೋರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
 
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ನಿರೀಕ್ಷೆಯ ಮಿತಿ ತಲುಪಿಲ್ಲ ಎನ್ನುವುದು ಕಾಂಗ್ರೆಸ್ ನಾಯಕರ ರೋಧನವಾಗಿದೆ.
 
ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಸ್ಥಾನ ಪಡೆದಿದ್ದರೆ, ಬಿಜೆಪಿ ಎರಡನೇ ಸ್ಥಾನ ಪಡೆದಿದೆ. ಮೂರನೇ ಸ್ಥಾನಕ್ಕೆ ಜೆಡಿಎಸ್ ತೃಪ್ತಿ ಪಟ್ಟಿದೆ. 

ವೆಬ್ದುನಿಯಾವನ್ನು ಓದಿ