ಜಿಲ್ಲಾಧಿಕಾರಿ ಸಿ.ಶಿಖಾಗೆ ಸಿಎಂ ಸಿದ್ದರಾಮಯ್ಯ ಒತ್ತಡ: ಯಡಿಯೂರಪ್ಪ

ಶನಿವಾರ, 23 ಜುಲೈ 2016 (18:35 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿದ್ದಾರೆ. ಅವರಿಗೆ ಸಿಎಂ ಆಪ್ತ ಮರಿಗೌಡ ವಿರುದ್ಧ ನೀಡಿರುವ ಪ್ರಕರಣವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 22 ದಿನ ಕಳೆದರೂ ಅವರ ಬಂಧನವಾಗಿಲ್ಲ. ಪ್ರಕರಣ ಕುರಿತಂತೆ ಹೈಕೋರ್ಟ್‌ ಸಹ ಅವರಿಗೆ ಛೇಮಾರಿ ಹಾಕಿದೆ ಎಂದು ಹೇಳಿದರು. 
 
ಮೈಸೂರು ಜಿಲ್ಲಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪ ಎದುರಿಸುತ್ತಿರುವ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಗೌಡ ಎಲ್ಲಿದ್ದಾನೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತು ಎಂದು ಹೇಳಿದರು.
 
ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಸಿ.ಶಿಖಾ ಅವರು ಮೈಸೂರು ಜಿಲ್ಲೆಯ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಸಿಎಂ ಆಪ್ತ ಮರಿಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು. 
 
ಸಿಎಂ ಆಪ್ತ ಮರಿಗೌಡ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಒತ್ತಡ ಹೇರುತ್ತಿದ್ದಾರೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ