ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ವಕೀಲ ನಟರಾಜ ಶರ್ಮಾ ಅವರು ದೂರು ದಾಖಲಿಸಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್ ಹಾಗೂ ಇಲಾಖೆಯ ನಿರ್ದೇಶಕರ ವಿರುದ್ಧವೂ ದೂರು ನೀಡಲಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.
ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಗುತ್ತಿಗೆದಾರರು ನೀಡುವ ಆಹಾರದಲ್ಲಿ ಗುಣಮಟ್ಟವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳಿಂದಲೇ ಆಹಾರ ಪೂರೈಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ, ಆದೇಶ ಉಲ್ಲಂಘಿಸಿ ಕಪ್ಪುಪಟ್ಟಿಗೆ ಸೇರಿದ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಆರೋಪಿಸಿದ್ದಾರೆ.