ಕುತೂಹಲ ಮೂಡಿಸಿದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಗುರುವಾರ, 7 ಮಾರ್ಚ್ 2019 (14:57 IST)
ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಬೆನ್ನಹಿಂದೆಯೇ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಕುತೂಹಲ ಮೂಡಿಸಿದೆ.

ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಇತರೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ಜತೆ ಗಹನ ಚರ್ಚೆ ನಡೆಸಲಾಗುತ್ತಿದೆ.

ಅತ್ಯಂತ ಶೀಘ್ರವೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿರುವ ಸಂದರ್ಭದಲ್ಲಿ ಪಕ್ಷದ ನಾಯಕರು ತಮ್ಮ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ಸಭೆ ನಡೆಯುತ್ತಿದೆ. ಪಕ್ಷದ ನಾಯಕರಲ್ಲಿ ಚುನಾವಣೆ ವಿಚಾರದಲ್ಲಿ ಒಮ್ಮತ ಮೂಡಿಸುವುದು ಕೂಡ ಇದರ ಉದ್ದೇಶವಾಗಿದೆ.

ಇನ್ನು ಹೈಕಮಾಂಡ್ ಮಟ್ಟದಲ್ಲಿ ಅದಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಡುವೆ ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ಒಮ್ಮತ ಮೂಡುವ ಮಾತುಕತೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಂದು ಹಂತದ ಮಾತುಕತೆಯಲ್ಲಿ ಸಮ್ಮತಿ ವ್ಯಕ್ತವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಇಂದಿನ ಚುನಾವಣಾ ಸಮಿತಿ ಸಭೆಯಲ್ಲಿ ಮೈತ್ರಿ ಸ್ಥಾನ ಹಂಚಿಕೆ ಸೇರಿದಂತೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮ ಗೊಳಿಸುವ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಜತೆಗೆ ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಸಮಾನ ಮನಸ್ಕ ಪಕ್ಷವಾದ ಜೆಡಿಎಸ್ ಜತೆ ಕೈಜೋಡಿಸಿದ್ದು, ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುತ್ತಾರೋ ಅಲ್ಲಿ ಕಾಂಗ್ರೆಸ್ ಅವರನ್ನು ಬೆಂಬಲಿಸಬೇಕಿದೆ. ನಮ್ಮ ಅಭ್ಯರ್ಥಿಗೆ ಅವರ ಬೆಂಬಲ ಸಿಗಲಿದೆ ಎಂಬ ಸಂದೇಶವನ್ನು ಇಂದು ನಾಯಕರು ಸಾರಲಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ