ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಗೋವಾ ಕಾಂಗ್ರೆಸ್ ನಾಯಕರು ಒಂದು ಹನಿ ನೀರನ್ನು ಬಿಡುವುದಿಲ್ಲ ಎಂದು ಖಾರವಾಗಿ ಹೇಳಿಕೆ ನೀಡಿದ್ದು, ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮಹದಾಯಿಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮನವೊಲಿಸಬೇಕು ಎಂದು ಒತ್ತಾಯಿಸಿದರು.
ಮಹದಾಯಿ ವಿಚಾರದಲ್ಲಿ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆಗೆ ವಿಪಕ್ಷಗಳಿಗೂ ಅವಕಾಶ ನೀಡಬೇಕು. ಅಂತರರಾಜ್ಯ ಜಲ ವಿವಾದದಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಸಮಸ್ಯೆ ಇತ್ಯರ್ಥಗೊಳಿಸಿಕೊಳ್ಳಬೇಕು. ಆದರೆ, ಕಾಂಗ್ರೆಸ್ ನಾಯಕರಿಗೆ ವಿವಾದ ಇತ್ಯರ್ಥವಾಗುವುದು ಬೇಕಿಲ್ಲ ಎಂದು ಹೇಳಿದರು.
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಪ್ರತಿನಿತ್ಯ ಕೊಲೆಗಳು ನಡೆಯುತ್ತಿದ್ದರೂ ಸಿಎಂ ಹಾಗೂ ಗೃಹ ಸಚಿವರು ಕೈಚೆಲ್ಲಿ ಕುಳಿತ್ತಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.