ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿದ್ದ ಶಾಸಕ ನಡಹಳ್ಳಿ ಅಮಾನತ್ತು

ಗುರುವಾರ, 23 ಏಪ್ರಿಲ್ 2015 (19:26 IST)
ಕಾಂಗ್ರೆಸ್ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷ ಗುರುವಾರ ಅಮಾನತು ಮಾಡಿದೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ನಡಹಳ್ಳಿ ವಾಗ್ದಾಳಿ ನಡೆಸಿದ್ದರು.

ಕಾಂಗ್ರೆಸ್ ನಿಯಮ ಉಲ್ಲಂಘಿಸಿ ಬಹಿರಂಗ ಹೇಳಿಕೆ ನೀಡಿದ್ದಕ್ಕೆ ಕಾರಣ ಕೇಳಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಏಪ್ರಿಲ್ 11ರಂದು ನೋಟಿಸ್ ಜಾರಿ ಮಾಡಿತ್ತು. ಆದರೆ ನಡಹಳ್ಳಿ ನೋಟಿಸ್ ಗೆ ಈವರೆಗೂ ಉತ್ತರ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಶಾಸಕಾಂಗ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಮಾನತು ಮಾಡಲು ನಿರ್ಣಯ ಕೈಗೊಂಡಿತ್ತು.

ಪಕ್ಷದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು ಅಮಾನತು ಮಾಡಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಪ್ಪಾಜಿ ಸಿಎಸ್ ನಾಡಗೌಡ ಆದೇಶ ಹೊರಡಿಸಿದ್ದಾರೆ.

ರಾಜ್ಯ ವಿಭಜನೆ ಕುರಿತ ಹೇಳಿಕೆ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ವಿಚಾರದ ಕುರಿತು ಒಂದು ವಾರದಲ್ಲಿ ಸೂಕ್ತ ಉತ್ತರ ನೀಡುವಂತೆ ಕೇಳಿ ನೋಟಿಸ್ ಜಾರಿ ಮಾಡಿತ್ತು.

ಆದರೆ, ನಡಹಳ್ಳಿ ಯಾವುದೇ ರೀತಿಯ ಉತ್ತರ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಪ್ಪಾಜಿ ನಾಡಗೌಡ ಅವರು ನಡಹಳ್ಳಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಶಿಫಾರಸು ಮಾಡಿದ್ದರು.

ವೆಬ್ದುನಿಯಾವನ್ನು ಓದಿ