ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕೈ ಹಿಡಿಯಲಿದೆ ಎಂದು ನಂಬಲಾಗಿತ್ತು. ಆದರೆ ಜನರು ಗ್ಯಾರಂಟಿ ಯೋಜನೆಗೆ ಬೆಲೆ ಕೊಟ್ಟಿಲ್ಲ. ಹೀಗಾಗಿ ಈಗ ಯೋಜನೆ ನಿಲ್ಲಿಸಲು ಕೆಲವು ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.
ಇಷ್ಟು ದಿನ ಗ್ಯಾರಂಟಿ ಯೋಜನೆಗಳಿಂದಲೇ ಈ ಬಾರಿ ನಮ್ಮ ಪಕ್ಷ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕರು ನಂಬಿಕೊಂಡಿದ್ದರು. ಆದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಹೀಗಾಗಿ ಇನ್ನೂ ಈ ಉಚಿತ ಯೋಜನೆ ಮುಂದುವರಿಸುವುದರಲ್ಲಿ ಅರ್ಥವಿಲ್ಲ ಎಂದು ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಶಾಸಕ ಬಾಲಕೃಷ್ಣ ಗ್ಯಾರಂಟಿ ಯೋಜನೆಗಳಿಂದ ನಮಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರು. ಇದೀಗ ಮೈಸೂರು-ಕೊಡಗು ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಕೂಡಾ ನಮಗೆ ಪ್ರಯೋಜನವಾಗದೇ ಇದ್ದ ಮೇಲೆ ಗ್ಯಾರಂಟಿ ಯೋಜನೆ ನಿಲ್ಲುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದಿದ್ದರು.
ಚುನಾವಣೆ ಮುಗಿದ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿದರೆ ವಿಪಕ್ಷಗಳ ಟೀಕೆಗೆ ಆಹಾರವಾಗಬೇಕಾಗುತ್ತದೆ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ಚಿಂತೆಯಾಗಿದೆ. ಹೀಗಾಗಿ ಸದ್ಯಕ್ಕೇ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಸರ್ಕಾರವೂ ಮುಂದಾಗದು.