ಸಿಎಂ ವಿರುದ್ಧ ಕಾಂಗ್ರೆಸ್ ಸಂಸದರೇ ಅಸಮಾಧಾನ

ಗುರುವಾರ, 28 ಏಪ್ರಿಲ್ 2016 (16:24 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯವೈಖರಿಗೆ ಕಾಂಗ್ರೆಸ್ ಸಂಸದರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ನಿವಾಸದಲ್ಲಿ ಆಯೋಜಿಸಲಾದ ಭೋಜನ ಕೂಟದಲ್ಲಿ ಪಾಲ್ಗೊಂಡ ಎಂಟು ಮಂದಿ ಕಾಂಗ್ರೆಸ್ ಸಂಸದರು  ಮತ್ತು ಇತರ ಹಿರಿಯ ಮುಖಂಡರು ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರಕಾರದ ಕಾರ್ಯವೈಖರಿ ಬದಲಾಗದಿದ್ದರೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಬೇರೆಯವರು ಮಾಡಿದ ತಪ್ಪಿಗೆ ನಾವೇಕೆ ಶಿಕ್ಷೆ ಅನುಭವಿಸಬೇಕು ಎಂದು ಕಾಂಗ್ರೆಸ್ ಸಂಸದರು ಕಿಡಿಕಾರಿದ್ದಾರೆ.
 
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸಿಎಂ ಸಿದ್ದರಾಮಯ್ಯ, ಒಂದೇ ಒಂದು ಬಾರಿ ಸಂಸದರ ಸಭೆ ಕರೆದಿದ್ದು, ನಂತರ ಸಂಸದರ ಸಭೆ ಕರೆದಿಲ್ಲ. ನಮ್ಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿಲುವಿನಲ್ಲಿ ಬದಲಾವಣೆ ತರದಿದ್ದಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಕೂಡಲೇ ಕಾಂಗ್ರೆಸ್ ಸಂಸದರ ಸಭೆ ಕರೆಯಲು ಸಿಎಂ ಮೇಲೆ ಒತ್ತಡ ಹೇರುವಂತೆ ಸಂಸದರು ಮೊಯ್ಗಿಗೆ ಮನವಿ ಮಾಡಿದರು.
 
ಶೀಘ್ರದಲ್ಲಿಯೇ ಕಾಂಗ್ರೆಸ್ ಸಂಸದರ ಸಭೆ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೋರಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.  
 
ಭೋಜನ ಕೂಟದಲ್ಲಿ ಎಂಟು ಮಂದಿ ಕಾಂಗ್ರೆಸ್ ಸಂಸದರು ಮತ್ತು ನಾಲ್ಕು ಮಂದಿ ರಾಜ್ಯ ಸಭೆಯ ಸದಸ್ಯರು ಪಾಲ್ಗೊಂಡಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ವೆಬ್ದುನಿಯಾವನ್ನು ಓದಿ