ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರೆತ್ತುವ ನೈತಿಕತೆಯಿಲ್ಲ: ಬಿಎಸ್‌ವೈ ಗುಡುಗು

ಶನಿವಾರ, 17 ಸೆಪ್ಟಂಬರ್ 2016 (15:31 IST)
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್, ಅವರು ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ದೆಹಲಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದವರು ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ಪಕ್ಷಕ್ಕೆ ಬಿ.ಆರ್.ಅಂಬೇಡ್ಕರ್ ಹೆಸರು ಹೇಳುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ಬೆಂಗಳೂರು ನಗರದ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ಎಸ್.ಸಿ.ಮೋರ್ಚಾ ಕಾರ್ಯಕಾರಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಕೋರ್ಟ್‌ಗೆ ಮನವರಿಕೆ ಮಾಡಿ, ತಜ್ಞರ ಸಮಿತಿ ಕಳುಹಿಸಲಿ ಎಂದು ರಾಜ್ಯ ಸರಕಾರಕ್ಕೆ ಬಿಜೆಪಿ ಸಲಹೆ ನೀಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ನಮ್ಮ ಸಲಹೆ ಪರಿಗಣಿಸದಿರುವದೇ ಇಷ್ಚೇಲ್ಲಾ ಸಮಸ್ಯೆಗಳಿಗೆ ಕಾರಣ ಎಂದು ಆರೋಪಿಸಿದರು. 
 
ಕಾವೇರಿ ಗಲಭೆಗೆ ಸಂಬಂಧಿಸಿದಂತೆ ದೇಶಭಕ್ತ ಆರ್‌ಎಸ್‌ಎಸ್ ಸಂಘಟನೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಗೃಹ ಸಚಿವರು ತಮ್ಮ ಹುಳುಕು ಮುಚ್ಚಿ ಹಾಕಿಕೊಳ್ಳಲು ಆರ್‌ಎಸ್‌ಎಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೆಲ್ಲ ತಮ್ಮ ಮನೆಯಲ್ಲಿ ಮಹಾತ್ಮಾ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡಲೇಬೇಕು ಎಂದು ಸೂಚನೆ ನೀಡುತ್ತೇವೆ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ತೀರ್ಥ ಕ್ಷೇತ್ರಗಳನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ