ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಗುರುವಾರ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಾಂಗ್ರೆಸ್ ನಾಯಕರು ಬೆಂಗಳೂರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಡಿ. ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ನಗರದ ಸ್ವಾಂತ್ರ್ಯ ಉದ್ಯಾನದಿಂದ ಹಿಡಿದು ಕೆ. ಆರ್. ವೃತ್ತ, ವಿಧಾನಸೌಧ ಮುಂದಿನ ರಸ್ತೆ ಮೂಲಕ ರಾಜಭವನದ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.
ಪ್ರತಿಭಟನೆ ವೇಳೆ ಮಾತನಾಡಿದ ಡಿ. ಕೆ. ಶಿವಕುಮಾರ್, "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಕರೆಸುವ ಅಗತ್ಯವಿಲ್ಲ, ಅವರು ಸುಮ್ಮನೆ ಕಿರುಕುಳ ನೀಡುತ್ತಿದ್ದಾರೆ. ಇದು ರಾಜಕೀಯ ಸೇಡು. ಬಿಜೆಪಿ ಅವರಿಗೆ ಭಯವಿರುವ ಕಾರಣ. ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ" ಎಂದರು.