ಬೆಂಗಳೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ರಾಜಭವನ ಚಲೋ ಹೆಸರಿನಲ್ಲಿ ಪಾದಯಾತ್ರೆ, ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಸಾಗಿ ಪ್ರತಿಭಟನೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಈ ಪ್ರತಿಭಟನೆ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರೆಲ್ಲರೂ ಭಾಗಿಯಾಗಲಿದ್ದಾರೆ.
ಇತ್ತೀಚೆಗಷ್ಟೇ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಜಮೀನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಹಾಂ ನೀಡಿದ ಖಾಸಗಿ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.
ಇದರ ವಿರುದ್ಧ ಸಿಎಂ ಈಗಾಗಲೇ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಒಂದು ಕಡೆಯಾದರೆ ಇನ್ನೊಂದು ಕಡೆ ಇಂದು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲರು ಕೇಂದ್ರದ ಎನ್ ಡಿಎ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.