ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ : ಜೊಲ್ಲೆ

ಬುಧವಾರ, 10 ಆಗಸ್ಟ್ 2022 (08:33 IST)
ಬೆಂಗಳೂರು : ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರ ಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ.

ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ಇಂದು ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಛತ್ರದ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಿಜೆಪಿ ಸರ್ಕಾರ ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮಹತ್ವ ನೀಡುತ್ತಿದೆ.

ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನಮ್ಮ ಇಲಾಖೆಗೆ ನೀಡಲಾಗಿದೆ. ರಾಜ್ಯದಿಂದ ಹೊರರಾಜ್ಯಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೊರರಾಜ್ಯಗಳಲ್ಲೂ ಕರ್ನಾಟಕ ಛತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗಿದೆ.

ಕೆಲವು ದಿನಗಳ ಹಿಂದೆ ಕೇರಳ ರಾಜ್ಯದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕಾಗಿ 5 ಕೋಟಿ, ಮಹಾರಾಷ್ಟ್ರ ರಾಜ್ಯದ ಪಂಡರಾಪುರದಲ್ಲಿ ಛತ್ರಕ್ಕಾಗಿ 3 ಕೋಟಿ, ಮಂತ್ರಾಲಯದಲ್ಲಿ ಛತ್ರಗಳ ಅಭಿವೃದ್ದಿಗಾಗಿ 4 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಹಿಂದೆ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್ ಅನುದಾನ ನೀಡಲಾಗಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ