ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ನಾನೇನನ್ನೂ ಪ್ರತಿಕ್ರಿಯಿಸಲಾರೆ ಎಂದ ಕಾಗೋಡು

ಸೋಮವಾರ, 6 ಜುಲೈ 2015 (12:37 IST)
ಲೋಕಾಯುಕ್ತ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ರಾಜ್ಯಾದ್ಯಂತ ಲೋಕಾಯುಕ್ತರ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತಿದ್ದು ಈ ಬಗ್ಗೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಪ್ರತಿಕ್ರಿಯಿಸಿದ್ದು, ಈ ಸಂಬಂಧ ನಾನು ಯಾವುದೇ ರೀತಿಯಾಗಿ ಪ್ರತಿಕ್ರಿಯಿಸಲಾರೆ. ಆದರೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದೇನೆ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸಾಕಷ್ಟು ಗೊಂದಲಗಳಿವೆ. ಆದ್ದರಿಂದ ನೇರವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಸಲುವಾಗಿ ಕಾನೂನಾತ್ಮಕವಾಗಿ ಪರಿಶೀಲಿಸುತ್ತಿದ್ದೇನೆ. ಕಾನೂನು ತಜ್ಞರ ಸಲಹೆ ಪಡೆದ ಬಳಿಕ ಬರುವ ವಿಚಾರ ಹಾಗೂ ವಿಮರ್ಶೆಗಳನ್ನಾಧರಿಸಿ ಮುಂದಿನ ಕ್ರಮಕ್ಕೆ ಮುಂದಾಗಲಿದ್ದೇನೆ. ಆದರೆ ಪ್ರಸ್ತುತ ಈ ಬಗ್ಗೆ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಏನಿದು ಪ್ರಕರಣ?: 
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಪದಚ್ಯುತಿಗೆ ಆಗ್ರಹಿಸಿವೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ವೆಬ್ದುನಿಯಾವನ್ನು ಓದಿ