ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವೃದ್ಧರು, ಗರ್ಭಿಣಿಯರು, ಹೃದಯ ಸಂಬಂಧಿ ಕಾಯಿಲೆ ಹಾಗೂ ಶ್ವಾಸಕೋಶ ಸಮಸ್ಯೆ ಇರುವ ನಾಗರಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಆತಂಕಪಡುವ ಪರಿಸ್ಥಿತಿಯಿಲ್ಲ. ಆದರೆ, ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಕ್ರಮ ಕೈಗೊಳ್ಳಲು ಆಡಳಿತವನ್ನು ಸಜ್ಜುಗೊಳಿಸಬೇಕು ಎಂದರು.
ವಿಮಾನ ನಿಲ್ದಾಣದಿಂದ ಹೊರಬರುವ ಪ್ರಯಾಣಿಕರ ಮೇಲೆ ಕಣ್ಗಾವಲು ಇಡಬೇಕು. ರಾಜ್ಯ ಪ್ರವೇಶಿಸುವವರ ಆರೋಗ್ಯ ತಪಾಸಣೆಗಾಗಿ ಪ್ರತ್ಯೇಕ ಘಟಕಗಳನ್ನು ತೆರೆಯಬೇಕು. ವೆಂಟಿಲೇಟರ್, ಆಮ್ಲಜನಕ, ಔಷಧ ಸೇರಿದಂತೆ ಅಗತ್ಯ ಪರಿಕರಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.