'ಲೋಕಾ'ದಲ್ಲಿ ಭ್ರಷ್ಟಾಚಾರ ಪ್ರಕರಣ: ಅಶ್ವಿನ್ ರಾವ್‌ಗೆ ನೋಟಿಸ್

ಬುಧವಾರ, 22 ಜುಲೈ 2015 (14:41 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪ್ರಕರಣದ ಪ್ರಮುಖ ಆರೋಪಿ ಎಂದೇ ಬಿಂಬಿಸಲಾಗುತ್ತಿರುವ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರಿಗೆ ಎಸ್ಐಟಿ ಆಗಾಗಲೇ ನೋಟಿಸ್ ಜಾರಿಗೊಳಿಸಿದ್ದು, ಜುಲೈ 25ರ ಒಳಗೆ ವಿಚಾರಣೆಗ ಹಾಜರಾಗುವಂತೆ ಸೂಚಿಸಿದೆ ಎಂಬುದಾಗಿ ತನಿಖಾ ತಂಡದ ಉನ್ನತ ಮೂಲಗಳು ತಿಳಿಸಿವೆ. 
 
ಏನಿದು ಪ್ರಕರಣ?:
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಮುಂದಾಗಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. 
 
ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಎಂಬಾತ ಅಶ್ವಿನ್ ರಾವ್ ಅವರೇ ಆಗಿದ್ದಾರೆ ಎಂದೂ ಹೇಳಲಾಗಿತ್ತು. 

ವೆಬ್ದುನಿಯಾವನ್ನು ಓದಿ