63ನೇ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಿ ನಗರೇಶ್ವರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8.30 ಗಂಟೆಗೆ ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು ಎಂದರು.
ನಾಡದೇವಿ ತಾಯಿ ಭುವನೇಶ್ವರಿ ಭಾವಚಿತ್ರದ ಬೃಹತ್ ಮೆರವಣಿಗೆಯನ್ನು ನೆಹರೂ ಗಂಜಿನ ನಗರೇಶ್ವರ ಪ್ರೌಢಶಾಲೆಯಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರವರೆಗೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೃಷಿ, ತೋಟಗಾರಿಕೆ, ಅರಣ್ಯ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ, ಆರೋಗ್ಯ, ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಯ ಸ್ತಬ್ಧಚಿತ್ರಗಳನ್ನು ನಿರ್ಮಿಸಬೇಕು. ಸ್ತಬ್ದಚಿತ್ರಗಳು ಜನರನ್ನು ಆಕರ್ಷಿಸುವಂತಾಗಬೇಕು ಎಂದರು.
ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಈ ಭಾಗದ ಸಂಸ್ಕøತಿಯನ್ನು ಬಿಂಬಿಸುವ ಡೊಳ್ಳು, ಲಂಬಾಣಿ ನೃತ್ಯ, ಚಿಟ್ಟಲಗೆಗಳಂತಹ ಒಟ್ಟು 5 ಕಲಾ ತಂಡಗಳನ್ನು ನಿಯೋಜಿಸಬೇಕು. ಮೆರವಣಿಗೆಯುದ್ದಕ್ಕು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ರಾಜ್ಯೋತ್ಸವದ ಮುನ್ನಾದಿನ ಹಾಗೂ ರಾಜ್ಯೋತ್ಸವ ದಿನದಂದು ಕಲಬುರಗಿ ಮಹಾನಗರ ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಭವನ, ಡಾ. ಎಸ್.ಎಂ.ಪಂಡಿತ ರಂಗಮಂದಿರ, ಕಲಬುರಗಿ ಮಹಾನಗರ ಪಾಲಿಕೆ ಕಚೇರಿಗಳನ್ನು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಜಗತ್ ವೃತ್ತಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಬೇಕು. ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಗಳಿಗೆ ದೀಪಾಲಂಕಾರಗೊಳಿಸಲು ವಾಣಿಜ್ಯ ತೆರಿಗೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಂಗಡಿ ಮಾಲೀಕರ ಮನವೋಲಿಸಬೇಕೆಂದರು.