ಬೆಳೆ ಹಾನಿ ಅಧ್ಯಯನಕ್ಕೆ ಕೇಂದ್ರಕ್ಕೆ ಮನವಿ ಮಾಡಿದ ದೇಶಪಾಂಡೆ

ಶನಿವಾರ, 25 ಏಪ್ರಿಲ್ 2015 (11:42 IST)
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದ್ದು, ರಾಜ್ಯದ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿ ಕೇಂದ್ರದಿಂದ ಅಧ್ಯಯನ ತಂಡವೊಂದನ್ನು ಕಳುಹಿಸಿಕೊಡುವಂತೆ ಮನವಿ ಮಾಡಿದ್ದಾರೆ. 
 
ನಿನ್ನೆ ರಾಜಧಾನಿಗೆ ಭೇಟಿ ನೀಡಿದ್ದ ಸಚಿವರು, ಪ್ರಧಾನಿ ಮೋದಿ ಹಾಗೂ ಇತರೆ ಸಚಿವ ಸಂಪುಟ ಸದಸ್ಯರೊಂದಿಗೆ ಇಂದು ಚರ್ಚಿಸಿದ್ದಾರೆ ಎನ್ನಲಾಗಿದ್ದು, ಬೆಳೆ ಪರಿಹಾರಕ್ಕಾಗಿ ಅನುಧಾನ, ಅಧ್ಯಯನ ತಂಡ ಹಾಗೂ ಪ್ರವಾಸೋದ್ಯಮ ಇಲಾಖೆಯ ಮೂಲ ಸೌಕರ್ಯಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಗದಗ, ರಾಯಚೂರು, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೇಂದ್ರಕ್ಕೆ ಬೆಳೆ ಹಾನಿ ಅಧ್ಯಯನ ತಂಡವನ್ನು ಕಳುಹಿಸಿ ಎಂದು ಮನವಿ ಮಾಡಿದ್ದಲ್ಲದೆ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಪ್ರವಾಸಿ ಸ್ಥಳಗಳಲ್ಲಿ ಮೂಲ ಸೌಕರ್ಯ ಒದಗಿಸುವುದು ಅಗತ್ಯವಾಗಿದೆ. ಈ ಸಂಬಂಧ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ಚರ್ಚಿಸಿದ್ದು, ರೂಸಾ ಯೋಜನೆಗೆ ಸಹಕರಿಸುವುದಾಗಿ ಸಚಿವೆ ಸಮ್ಮತಿಸಿದ್ದಾರೆ ಎಂದ ಅವರು, ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಪುರಾತತ್ವ ಇಲಾಖೆಯ ಅನುಮತಿ ಅಗತ್ಯವಾಗಿದ್ದು, ಹಸಿರು ನಿಶಾನೆ ದೊರೆಯುವ ಸಾಧ್ಯತೆ ಇದೆ ಎಂದರು. 
 
ಇದೇ ವೇಳೆ, ಕೇಂದ್ರ ಸರ್ಕಾರವು ಐಐಟಿ ಸಂಸ್ಥೆಯನ್ನು ರಾಜ್ಯದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಮೂರು ಪ್ರಮುಖ ಜಿಲ್ಲೆಗಳನ್ನು ಆರಿಸಿದ್ದು, ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದೇವೆ. ಆದ್ದರಿಂದ ಆ ಬಗ್ಗೆ ಕೇಂದ್ರವೇ ಸೂಕ್ತ ನಿರ್ಧಾರ ಕೈಗೊಂಡು ಸ್ಥಾಪನೆಗೆ ಮುಂದಾಗಲಿದೆ. ರಾಯಚೂರು, ಹುಬ್ಬಳ್ಳಿ ಹಾಗೂ ಮೈಸೂರನ್ನು ಆರಿಸಿ ರವಾನಿಸಲಾಗಿದೆ ಎಂದರು. 

ವೆಬ್ದುನಿಯಾವನ್ನು ಓದಿ