ಎಲ್ಲ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಿಗೆ ಗ್ರಾಹಕರು ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಯೊಬ್ಬರು ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಬ್ಯಾಂಕುಗಳಲ್ಲಿ ಗ್ರಾಹಕರು ಸಾಲುಗಳಲ್ಲಿ ನಿಂತುಕೊಂಡು ‘ಸಾಮಾಜಿಕ ಅಂತರ’ ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ಕೊರೊನಾ ಸೋಂಕು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಿಗೆ ಗ್ರಾಹಕರು ಬರುವುದನ್ನು ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ಗ್ರಾಹಕರು ಬ್ಯಾಂಕುಗಳಲ್ಲಿ ಹೊಂದಿರುವ ಉಳಿತಾಯ ಖಾತೆ, ಬಡವರ ಕಲ್ಯಾಣ ಯೋಜನೆಯಲ್ಲಿ ಪ್ರಧಾನ ಮಂತ್ರಿಗಳ ಜನಧನ ಖಾತೆ ಅಥವಾ ಇನ್ನಾವುದೇ ಖಾತೆ ಹೊಂದಿರುವ ಗ್ರಾಹಕರು ಖಾತೆಗಳಲ್ಲಿ ಹಣ ಪಡೆಯುವುದಕ್ಕಾಗಿ ಬ್ಯಾಂಕುಗಳಿಗೆ ಬರುವಂತಿಲ್ಲ.
ಎಲ್ಲ ಬ್ಯಾಂಕುಗಳ ಶಾಖಾ ವ್ಯವಸ್ಥಾಪಕರು ‘ಬ್ಯಾಂಕ್ ಮಿತ್ರ’ ಎಂಬುವವರ ಮೂಲಕ ಆಯಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ನಿರ್ದಿಷ್ಟ ಸ್ಥಳಕ್ಕೆ ಹಣ ವಿತರಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.