ಗ್ಯಾರಂಟಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರಿಗೇ ಶಾಕ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

Krishnaveni K

ಬುಧವಾರ, 27 ನವೆಂಬರ್ 2024 (10:19 IST)
ಬೆಂಗಳೂರು: ಪದೇ ಪದೇ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ ಗೊಂದಲ ಸೃಷ್ಟಿಸುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ.

ಉಪಚುನಾವಣೆ ಗೆಲುವಿನ ಬಳಿಕ ಕಾಂಗ್ರೆಸ್ ಶಾಸಕ ಗವಿಯಪ್ಪ, ಐದು ಗ್ಯಾರಂಟಿ ಯೋಜನೆಗಳ ಪೈಕಿ ಎರಡನ್ನಾದರೂ ನಿಲ್ಲಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ನಮಗೆ ಯಾವುದೇ ಅನುದಾನ ಬರುತ್ತಿಲ್ಲ ಎಂದು ಬಹಿರಂಗವಾಗಿ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಇದು ಭಾರೀ ಟೀಕೆಗೆ ಗುರಿಯಾಗಿತ್ತು.

ಮತ್ತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಮುಂದುವರಿಸುವ ಬಗ್ಗೆ ಗೊಂದಲಗಳು ಎದ್ದಿದ್ದವು. ಈ ಹಿಂದೆ ಸ್ವತಃ ಡಿಕೆ ಶಿವಕುಮಾರ್ ಅವರೇ ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ವಿಚಾರವನ್ನು ಇಟ್ಟುಕೊಂಡು ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿ ಟೀಕೆ ಮಾಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಂಗ್ರೆಸ್ ನಾಯಕರು ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಶಾಸಕ ಗವಿಯಪ್ಪ ಹೇಳಿಕೆಯಿಂದ ಗೊಂದಲ ಉಂಟಾದ ಬೆನ್ನಲ್ಲೇ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ನಿಲ್ಲಿಸುವ ಮಾತನಾಡಿರುವ ಶಾಸಕ ಗವಿಯಪ್ಪಗೆ ಕೆಪಿಸಿಸಿ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಇದರ ಜೊತೆಗೆ ಇತರೆ ನಾಯಕರಿಗೂ ಡಿಕೆಶಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ ಬಗ್ಗೆ ಗೊಂದಲ ಮೂಡಿಸುವಂತಹ ಹೇಳಿಕೆಗಳನ್ನು ನೀಡಿದರೆ ಕಾಂಗ್ರೆಸ್ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಯಾರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಒಂದು ವೇಳೆ ಅನರ್ಹರು ಫಲ ಪಡೆಯುತ್ತಿದ್ದರೆ ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ