ಬೆಂಗಳೂರು: ಅನುದಾನ ಕೇಳಿದ ಸಂಸದ ತೇಜಸ್ವಿ ಸೂರ್ಯಗೆ ನನ್ನ ಜತೆ ತಗ್ಗಿ ಬಗ್ಗಿ ಇರಬೇಕೆಂದು ವಾರ್ನ್ ಮಾಡಿದ ಡಿಕೆ ಶಿವಕುಮಾರ್ ನಡೆಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂದ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು - ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು.
ಸನ್ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ.
ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ.
ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ.