ಇದೆಂತಾ ಘೋರ: ತಂದೆಯಿಂದಲೇ ಮಗಳ ಮೇಲೆ ರೇಪ್!

ಸೋಮವಾರ, 20 ಡಿಸೆಂಬರ್ 2021 (16:58 IST)
ಮಂಗಳೂರು : 2020ರಲ್ಲಿ ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
 
ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಹೆಚ್ಚುವರಿಯಾಗಿ 5 ಸಾವಿರ ರೂ. ದಂಡ ಹಾಗೂ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ.  ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಬಾಲಕಿ ನೆರೆಹೊರೆಯವರ ಸಹಾಯದಿಂದ ತನ್ನ ತಾಯಿಗೆ ಘಟನೆಯ ಬಗ್ಗೆ ತಿಳಿಸಿದ್ದಳು.

ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ತಂದೆಯನ್ನು ಬಂಧಿಸಲಾಗಿತ್ತು. ಸಂತ್ರಸ್ತೆ, ಆಕೆಯ ತಾಯಿ ಮತ್ತು ನೆರೆಹೊರೆಯವರ ಹೇಳಿಕೆಗಳು ಆರೋಪಗಳನ್ನು ಸಾಬೀತುಪಡಿಸಲು ಸಹಾಯ ಮಾಡಿತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ ಟಿ ರಾಘವೇಂದ್ರ ವಾದ ಮಂಡಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ