ಬರ ಪರಿಸ್ಥಿತಿ: ಜಿಲ್ಲಾಧಿಕಾರಿಗಳ ಜತೆ ಸಿಎಂ ಸಭೆ
ಮಂಗಳವಾರ, 27 ನವೆಂಬರ್ 2018 (14:36 IST)
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ವಿಪಕ್ಷದ ನಾಯಕರು ದೂರುತ್ತಿರುವ ಬೆನ್ನಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸಿಎಂ, ಡಿಸಿ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲು ಮುಂದಾಗಿದ್ದಾರೆ.
ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ , ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು 100 ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವುದು ಸೇರಿದಂತೆ ಆಡಳಿತಕ್ಕೆ ಸಂಬಂಧಿಸಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ , ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು , ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಲಿದ್ದಾರೆ .
ರಾಜ್ಯದಲ್ಲಿ ಈ ಬಾರಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಬರಪೀಡಿತ ಜಿಲ್ಲೆಗಳಲ್ಲಿ ಸಮಾರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜನ ಗುಳೆ ಹೋಗದಂತೆ ತಡೆಯಬೇಕು. ಸಮರ್ಪಕ ಕುಡಿಯುವ ನೀರು ಒದಗಿಸಲು ಕೈಗೊಳ್ಳಬೇಕಾದ ಕ್ರಮಗಳು , ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು ಆಗಬೇಕಾಗಿರುವ ಕೆಲಸಗಳು , ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಬಗ್ಗೆಯೂ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆಯಲ್ಲಿ ಚರ್ಚೆ ನಡೆಸುವರು .
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಪಾಲ್ಗೊಳ್ಳುವರು .
ಆ್ಯಪ್ನಲ್ಲಿ ವೀಕ್ಷಿಸಿ x