ಹಿಂಗಾರು ಮಳೆ ವೈಫಲ್ಯದಿಂದ ರೂ.10 ಸಾವಿರ ಕೋಟಿ ನಷ್ಟ

ಮಂಗಳವಾರ, 13 ಡಿಸೆಂಬರ್ 2016 (11:41 IST)
ಹಿಂಗಾರು ಮಳೆ ವೈಫಲ್ಯದಿಂದಾಗಿ ರಾಜ್ಯದಲ್ಲಿ ಸುಮಾರು 8 ರಿಂದ 10 ಲಕ್ಷ ಪ್ರದೇಶ ಬಿತ್ತನೆ ಮಾಡಿದ್ದ ಬೆಳೆ ನಷ್ಟವಾಗಿದೆ. ಇದರಿಂದ ಸುಮಾರು 10 ಸಾವಿರ ಕೋಟಿ ರೂ. ನಷ್ಟ ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.
 
ವಿಧಾನಸೌಧದಲ್ಲಿ ಇಂದು ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳೆ ನಷ್ಟದ ಪ್ರಮಾಣ ನಿಖರ ಮಾಹಿತಿ ಸಂಗ್ರಹಿಸಿದ ನಂತರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಆರ್ಥಿಕ ನೆರವಿಗಾಗಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು. ಮುಂಗಾರು ಬೆಳೆ ನಷ್ಠಕ್ಕೆ ಸಂಬಂಧಿಸಿದಂತೆ ಸುಮಾರು 470 ಕೋಟಿ ರೂ. ಪರಿಹಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 
 
ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದ 15 ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕೇಂದ್ರಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದರೂ, ಈ ವರ್ಷ ಈವರೆಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ತಿಂಗಳ ಅಂತ್ಯಕ್ಕೆ ಹಣ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ