ಅಧಿವೇಶನದ ನಂತರ ಪಕ್ಷ ಸಂಘಟನೆಗೆ ಒತ್ತು: ಕುಮಾರಸ್ವಾಮಿ

ಬುಧವಾರ, 15 ಸೆಪ್ಟಂಬರ್ 2021 (10:35 IST)
ಬೆಂಗಳೂರು : ವಿಧಾನಮಂಡಲ ಅಧಿವೇಶನ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಪ್ರವಾಸ, ಜಿಲ್ಲಾವಾರು ಸಭೆ ಸೇರಿ ಹಲವು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಅಧಿವೇಶನದ ನಂತರ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಯವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಭೆಯ ನಂತರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಾಗಿದೆ. ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಗೆ 125 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಇದೇ ತಿಂಗಳ 28 ಮತ್ತು 29 ರಂದು ಅವರಿಗೆ ಕಾರ್ಯಾಗಾರ ನಡೆಸಿ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯ ಟಾಸ್ಕ್ ನೀಡಲಾಗುವುದು ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ