ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಣೆ: ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್‌

Sampriya

ಶನಿವಾರ, 15 ಜೂನ್ 2024 (16:30 IST)
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ಕರ್ನಾಟಕ ಹೈಕೋರ್ಟ್ ವಿಸ್ತರಿಸಿ ಆದೇಶ ನೀಡಿದೆ.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಆದರೆ, ಈ ಹಿಂದೆ ನೀಡಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 7 ರಂದು ಕರ್ನಾಟಕ ಹೈಕೋರ್ಟ್ ಭವಾನಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ಆದೇಶದಂತೆ ಅರ್ಜಿದಾರರು ಮೂರು ದಿನಗಳ ಕಾಲ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪ ಸಂಬಂಧ ಭವಾನಿ ರೇವಣ್ಣ ವಿರುದ್ಧ ಕೆಆರ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌ಡಿ ರೇವಣ್ಣ ಈಗಾಗಲೇ ಬಂಧನಕ್ಕೊಳಗಾಗಿದ್ದರು ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಹೆಸರು ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ