ಬೆಂಗಳೂರು: ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಈಗ ಮಳೆಯ ಸಿಂಚನವಾಗುತ್ತಿದೆ. ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವೆಡೆ ಮಳೆಯ ಸೂಚನೆ ಸಿಕ್ಕಿದೆ.
ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ. ಉಳಿದ ಕಡೆ ಮೋಡ ಕವಿದ ವಾತಾವರಣವಿದ್ದು, ಇಂದು ಅಥವಾ ನಾಳೆ ಮಳೆಯಾಗುವ ಸಂಭವವಿದೆ. ಹವಾಮಾನ ಇಲಾಖೆ ಈಗಾಗಲೇ ಎರಡು ದಿನಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಿತ್ತು.
ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ಬೆಂಗಳೂರಿನಲ್ಲಿ ಸದ್ಯಕ್ಕೆ ಮೋಡ ಕವಿದ ವಾತಾವಾರಣವಿರಲಿದ್ದು, ಇಲ್ಲೂ ಮಳೆಯಾಗುವ ಸಾಧ‍್ಯತೆ ತಳ್ಳಿ ಹಾಕುವಂತಿಲ್ಲ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಜನ ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಈಗ ಮಳೆಯಾದರೆ ಕೊಂಚ ನೀರಿನ ಸಮಸ್ಯೆಗೆ ಪರಿಹಾರ ಸಿಗಬಹುದು.