ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.
ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.