ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲದು: ಶೆಟ್ಟರ್- ಕುಮಾರಸ್ವಾಮಿ ವಾರ್ನಿಂಗ್

ಗುರುವಾರ, 14 ಜುಲೈ 2016 (18:20 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲೇ ಬೇಕು ಎಂದು ಆಗ್ರಹಿಸಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ವಿಪಕ್ಷಗಳು ಅಹೋರಾತ್ರಿ ಧರಣಿ ಕೈಗೊಂಡರು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆದಿಲ್ಲ ಎಂದು ಆರೋಪಿಸಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಯಾವ ರೀತಿಯ ಉತ್ತರ ನೀಡಿದ್ದೀರಿ ಎಂದು ರಾಜ್ಯದ ಜನತೆ ನೋಡಿದ್ದಾರೆ. ಗಣಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ನೀಡಿದ್ದಾರೆ. ಡೈಯಿಂಗ್ ಡಿಕ್ಲೆರೇಶನ್ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಜುಲೈ 30 ರ ವರೆಗೂ ಅಧಿವೇಶನ ನಡೆಯಲಿದೆ. ಯಾವುದೇ ಚರ್ಚೆಗಳು ನಡೆಯಬಾರದೆಂಬ ಉದ್ದೇಶದಿಂದ ಎಲ್ಲಾ ಇಲಾಖೆಯ ವಿಧೇಯಕಗಳನ್ನು ಒಂದೆ ದಿನದಲ್ಲಿ ಮಂಡನೆ ಮಾಡಿದ್ದಾರೆ. ನಾಳೆ ಕಲಾಪವನ್ನು ಅನಿರ್ಧಿಷ್ಟ ಸಮಯದವರೆಗೂ ಮುಂದುಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲೇ ಬೇಕು. ರಾಜಕೀಯ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷುಲಕ ಮಾತಾಡುತ್ತಿದ್ದಾರೆ. ತಮ್ಮ ಸರಕಾರದ ವೈಪಲ್ಯಗಳನ್ನು ಮುಚ್ಚಿಕೊಳ್ಳಲು ಮುಚ್ಚಿಕೊಳ್ಳುವ ಪ್ರಯತ್ನ ನಡಿಸಿದ್ದಾರೆ ಎಂದು ಹೇಳಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದರಿಂದ ಸತ್ಯಾಂಶ ಹೊರಬರುವುದಿಲ್ಲ. ಮತದಾರರಲ್ಲಿ ವಿಶ್ವಾಸ ಮೂಡಬೇಕಾದರೆ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡಿಯಿರಿ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ