ಬ್ರಾಹ್ಮಣರಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ಸರ್ಕಾರಿ ಆದೇಶ
ಗುರುವಾರ, 16 ಜುಲೈ 2020 (19:23 IST)
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಸರಕಾರ ಮತ್ತೊಂದು ಕ್ರಮ ಕೈಗೊಂಡಿದೆ.
ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಬ್ರಾಹ್ಮಣ ಸಮುದಾಯದವರಿಗೆ ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಆದೇಶ ಹೊರಡಿಸಿತ್ತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಠಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ ಎಂದಿದ್ದಾರೆ.