ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರನ್ನು ರಕ್ಷಿಸಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಬೆಲೆ ಏರಿಕೆಗೆ ನಾಂದಿ ಹಾಡಿದ್ದೇ ಬಿಜೆಪಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ರಾಜ್ಯದ ರೈತರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಿದ್ದೇವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿನ ದರ ಕಡಿಮೆ ಇದೆ ಎಂದು ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡರು.
ಮೇಕೆದಾಟಿಗೆ ತಮಿಳುನಾಡಿನ ಒಪ್ಪಿಗೆ ಪಡೆದರೆ ಎತ್ತಿನಹೊಳೆಗೆ ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುವುದಾಗಿ ಬಿಜೆಪಿಯ ಸಲಹೆಯನ್ನು ಸ್ವೀಕರಿಸುತ್ತೇನೆ. ಎತ್ತಿನಹೊಳೆಗೆ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಬದಲಿ ಭೂಮಿ ನೀಡಿದ್ದೇವೆ. ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಲೇಬೇಕು. ಇದರಲ್ಲಿ ಕೊಡಿಸುವುದೇನಿದೆ? ಅದು ಕೇಂದ್ರದ ಕರ್ತವ್ಯ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಬಿಡುಗಡೆ ವಿಚಾರ ಕೇಂದ್ರ ಸಚಿವ ಸಂಪುಟದ ಮುಂದೆ ಇದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ಯೋಜನೆಗೆ ರಾಜ್ಯ ಸರ್ಕಾರ ಮಾಡಿರುವ ಖರ್ಚು, ಕೇಂದ್ರ ನೀಡಬೇಕಿರುವ ಹಣದ ವಿವರವನ್ನು ಸಲ್ಲಿಸಲಾಗಿದೆ. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.