ಬೆಂಗಳೂರು: ಮಗ ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿರುವ ಹಿನ್ನಲೆಯಲ್ಲಿ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಮನೆಯಲ್ಲಿಯೇ ಹೋಮ, ಹವನ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಡಿಯೋ ತುಣುಕುಗಳೂ ಹರಿದಾಡಿದ್ದವು. ಇದರ ಬೆನ್ನಲ್ಲೇ ಪ್ರಜ್ವಲ್ ರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ರೇವಣ್ಣ ತಮ್ಮ ಮಗನಿಗಾಗಿ ದೇವರ ಮೊರೆ ಹೋಗಿದ್ದಾರೆ.
ನಿನ್ನೆಯಷ್ಟೇ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದ ರೇವಣ್ಣ ಬಳಿಕ ಮನೆಯಲ್ಲಿಯೇ ಹೋಮ ನಡೆಸಿ ಮಗನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಸದ್ಯಕ್ಕೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್ಐಟಿಗೊಪ್ಪಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ನಂ.1 ಆರೋಪಿಯಾದರೆ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ.
ರೇವಣ್ಣನ ವಿರುದ್ಧ ಮನೆಕೆಲಸ ಮಾಡುತ್ತಿದ್ದ ಮಹಿಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊರಿಸಿದ್ದಳು. ಈ ಸಂಬಂಧ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇದೀಗ ಎಸ್ಐಟಿ ತಂಡ ತನಿಖೆ ಆರಂಭಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಮತ್ತು ರೇವಣ್ಣಗೆ ನೋಟಿಸ್ ನೀಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಬಹುದು.