ಅಶ್ವತ್ಥ ನಾರಾಯಣ ರಾಜೀನಾಮೆಗೆ HDK ಆಗ್ರಹ

ಶುಕ್ರವಾರ, 23 ಸೆಪ್ಟಂಬರ್ 2022 (14:03 IST)
ವಿಧಾನಸಭೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ವಾಗ್ವಾದ, ಏಕವಚನದ ಬೈದಾಟಕ್ಕೆ ಕಾರಣವಾಗಿದ್ದ ಬಿಎಂಎಸ್​ ಟ್ರಸ್ಟ್​ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ವಿವಾದದ ಬಗ್ಗೆ  ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ಬಿಎಂಎಸ್ ಟ್ರಸ್ಟ್​ನ ಮೂಲ ಡೀಡ್ ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಸಚಿವ ಅಶ್ವತ್ಥ ನಾರಾಯಣಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಎಂಎಸ್ ಟ್ರಸ್ಟ್​ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ. ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ