ಚಿಕ್ಕಬಳ್ಳಾಪುರ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ವಿಡಿಯೊ ಕಳುಹಿಸಿ ಇದೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇವತ್ತು ನಮಗೂ ಸ್ವಲ್ಪ ಸಮಾಧಾನ ತಂದಿದೆ ಎಂದಿದ್ದಾರೆ.
ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಪ್ರಜ್ವಲ್ ಎಲ್ಲೆ ಇದ್ದರೂ ಬಂದು ಎಸ್‌ಐಟಿ ಮುಂದೆ ಹಾಜರಾಗುವ ಮೂಲಕ ತನಿಖೆಗೆ ಸಹಕಾರ ಕೊಡುವಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ನಾನು ಕೇಳಿಕೊಂಡಿದ್ದೆವು. ಈ ಬಗ್ಗೆ ದೇವೇಗೌಡರು ಎಚ್ಚರಿಕೆ ಕೊಟ್ಟರೆ, ನಾನು ಮನವಿ ಮಾಡಿಕೊಂಡಿದ್ದೆ. ಅಲ್ಲದೇ ಇದೇ ವೇಳೆ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದರೆ ಕೂಡಲೇ ಬರಬೇಕು ಎಂದು ಹೇಳಿದ್ದೆವು ಎಂದರು.
ಪ್ರಜ್ವಲ್ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತರ ನಡೆಸಿರುವುದು ಕಾಂಗ್ರೆಸ್ ಎನ್ನುವುದು ಇಡೀ ಜಗತ್ತಿಗೆ ಗೊತ್ತು. ಕಾನೂನಿನ ಮುಂದೆ ಎಲ್ಲರೂ ಸಮಾನರು, ಯಾರು ದೊಡ್ಡವರಿಲ್ಲ ಎಲ್ಲರೂ ಕಾನೂನಿಗೆ ತಲೆ ಬಾಗಲೇಬೇಕು. ಮುಂದಿನ ದಿನಗಳಲ್ಲಿ ಏನೇನೋ ನಡೆಯುತ್ತದೆ ನೋಡೋಣ. ಈಗಲೇ ಪ್ರಕರಣದ ಬಗ್ಗೆ ಏನು ಹೇಳುವುದಿಲ್ಲ ಎಂದು ಹೇಳಿದರು.