ಕರ್ನಾಟಕದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ: ಕರ್ನಾಟಕದಲ್ಲಿ ಮೂರು ದಿನ ಮಳೆ

Sampriya

ಭಾನುವಾರ, 1 ಡಿಸೆಂಬರ್ 2024 (11:38 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್‌ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಡಿ.2 ಮತ್ತು 3ರಂದು ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಡಿ.1 ರಿಂದ 3ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಡಿ.3ರಂದು ಯೆಲ್ಲೊಅಲರ್ಟ್‌ ನೀಡಲಾಗಿದೆ. ಈ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 18 ಸೆಂ.ಮೀ. ಹಾಗೂ ಗರಿಷ್ಠ ಉಷ್ಣಾಂಶ 25 ರಿಂದ 26 ಡಿ.ಸೆ. ಇರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಫೆಂಗಲ್‌ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನಲ್ಲಿ ಗಂಟೆಗೆ 90 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯ ಜತೆ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು, ಕಾಂಚಿಪುರಂ, ವಿಲ್ಲುಪುರಂ, ಕಲ್ಲಕುರುಚಿ, ಕಡಲೂರು ಜಿಲ್ಲೆಗಲ್ಲಿ ಮಳೆಯಾಗುತ್ತಿದೆ. ಪುದುಚೆರಿಯಲ್ಲಿ ಬಿರುಗಾಳಿ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬಹುತೇಕ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ