ಬೆಂಗಳೂರು: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಇನ್ನೂ ಚಂಡಮಾರುತ ಪರಿಣಾಮವಾಗಿ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.
ಈ ಹಿನ್ನೆಲೆ 18ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದೆ.
ಇನ್ನು ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ವ್ಯಾಪಕ ಮಳೆಯಾಗಲಿದೆ . ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.