ಬೆಂಗಳೂರು: ಜುಲೈ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಜುಲೈ 28ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜುಲೈ 26ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 27 ಹಾಗೂ 28ರಂದು ಹಳದಿ ಅಲರ್ಟ್ ಘೊಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಜುಲೈ 26ರ ವರೆಗೆ ಆರೆಂಜ್, ಜುಲೈ 27ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಕರಾವಳಿಯಲ್ಲಿ ಹಾಗೂ ಕರಾವಳಿ ತಟದ ಹತ್ತಿರ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.