ಇಂದು-ನಾಳೆ ಕರ್ನಾಟಕದಲ್ಲಿ ಭಾರೀ ಮಳೆ

ಸೋಮವಾರ, 23 ಆಗಸ್ಟ್ 2021 (08:56 IST)
Karnataka Rains Today:(ಆ.23): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಮತ್ತು ನಾಳೆ  ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ  ಇಂದು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23 ಮತ್ತು 24ರಂದು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್ 24ರವರೆಗೆ ಅಧಿಕ ಮಳೆಯಾಗಲಿದ್ದು, ಇನ್ನೆರಡು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ