ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದ ಹೈಕೋರ್ಟ್‌ ನ್ಯಾಯಮೂರ್ತಿ ವಿಷಾದ

Sampriya

ಶನಿವಾರ, 21 ಸೆಪ್ಟಂಬರ್ 2024 (18:39 IST)
Photo Courtesy X
ಬೆಂಗಳೂರು: ಪ್ರಕರಣಗಳ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದು ಬಣ್ಣಿಸಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಶ್ರೀಶಾನಂದ ವಿಷಾದ ವ್ಯಕ್ತಪಡಿಸಿದ್ದಾರೆ.

ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಎದುರು ಮುಕ್ತ ನ್ಯಾಯಾಲಯದಲ್ಲಿ ಈ ಕುರಿತು ವಿವರಿಸಿ ವಿಷಾಧ ವ್ಯಕ್ತಪಡಿಸಿದರು.

ಈ ವೇಳೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್‌ ಮತ್ತು ಹೈಕೋರ್ಟ್‌ ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ವಕೀಲರು ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.

ಪ್ರಕರಣದ ಹಿನ್ನೆಲೆ ಹೀಗಿದೆ: ನ್ಯಾಯಮೂರ್ತಿ ಶ್ರೀಶಾನಂದ ಅವರು ಪ್ರಕರಣಗಳ ವಿಚಾರಣೆ ವೇಳೇ, ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದು ಬಣ್ಣಿಸಿದ್ದು ಹಾಗೂ ಮಹಿಳಾ ವಕೀಲೆಯೊಬ್ಬರಿಗೆ, ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ ಎಂದು ವ್ಯಂಗ್ಯ ಮಾತನ್ನಾಡಿದ್ದರು.

ಇವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದ ಹಾಗೇ ಇದೀಗ ನ್ಯಾಯಮೂರ್ತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ