ಬೆಂಗಳೂರು : ಹಿಜಬ್ ವಿವಾದದಿಂದ ಸಾವಿರಾರು ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರ ಕುರಿತು ಸರ್ಕಾರ ಆದೇಶವನ್ನು ಪರಿಷ್ಕರಿಸಬೇಕು ಎಂದು ಸಾಹಿತಿಗಳು, ಬರಹಗಾರರು ಹಾಗೂ ಜನಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಕನ್ನಡ ನಾಡಿನ ಹೆಸರಾಂತ ಸಾಹಿತಿ, ಬರಹಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಮುಖ್ಯಮಂತ್ರಿಗಳ ಮುಂದೆ ಮನವಿ ಸಲ್ಲಿಸಲಾಯಿತು.
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ NEET ವ್ಯವಸ್ಥೆಯಿಂದ ಹೊರ ಬರುವ ಅಗತ್ಯವಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ಅನುಷ್ಠಾನ ಸಮರ್ಪಕವಾಗಿ ಆಗಬೇಕು. ಹೆಣ್ಣುಮಕ್ಕಳ ದೌರ್ಜನ್ಯ ಅಧ್ಯಯನ ಸಮಿತಿಯ ವರದಿಯ ಶಿಫಾರಸುಗಳ ಜಾರಿಗೆ ಕ್ರಮ ಕೈಗೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆ ರಕ್ಷಣೆ ಮಾಡಲು ಮಸೂದೆ ಮಂಡಿಸಬೇಕು.
ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕುರಿತ ಸರ್ಕಾರಿ ಆದೇಶವನ್ನು ಹಿಂಪಡೆಯಬೇಕು. ಹಲವರು ಸಾಹಿತಿ, ಚಿಂತಕರಿಗೆ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿದ್ದು, ಭಯದ ವಾತಾವರಣ ನಿರ್ಮಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.