ಹಿಜಾಬ್ ಧರಿಸಿದವರಿಗೆ ಅನುಮತಿ ಇಲ್ಲ
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು. ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.ಇನ್ನು ಪಿಯುಸಿ ಪರೀಕ್ಷೆ ವೇಳೆಯಲ್ಲಿ ಹಿಜಾಬ್ ವಿವಾದವು ಮರುಕಳಿಸುವ ನಿರೀಕ್ಷೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಉದ್ದೇಶದಿಂದಾಗಿ ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.