ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

Sampriya

ಶುಕ್ರವಾರ, 17 ಅಕ್ಟೋಬರ್ 2025 (14:23 IST)
Photo Credit X
ಕೊಡಗು: ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ ಕಾವೇರಿ ತೀರ್ಥೋದ್ಭವವಾಗಿದೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಈ ವಿಸ್ಮಯಕಾರಿ ಕ್ಷಣ ಕಂಡ ಭಕ್ತರು ಪುನೀತರಾದರು.

ಇಂದು ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.

ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಕಾರ್ಯಕ್ರಮದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿದ್ದರು.

ಸಂಕ್ರಾತಿಯಂದು ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿ ದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ