ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಗೃಹ ಸಚಿವರ ಸಂಚು: ಸಿ.ಟಿ.ರವಿ

ಶನಿವಾರ, 17 ಸೆಪ್ಟಂಬರ್ 2016 (14:32 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೂ ಎಣ್ಣೆ ಸೀಗೆಕಾಯಿ ಸಂಬಂಧ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಗೃಹ ಸಚಿವರು ಸಂಚು ರೂಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಗುಡುಗಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಗೃಹ ಸಚಿವರು ನಿಮ್ಮ ವಿರುದ್ಧವೇ ಕುತಂತ್ರ ಮಾಡುತ್ತಿದ್ದು, ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಂಚು ರೂಪಿಸುತ್ತಿದ್ದಾರೆ. ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಿ, ನಿಮ್ಮ ಕುರ್ಚಿ ಉಳಿಯುತ್ತದೆ ಎಂದು ಸಲಹೆ ನೀಡಿದ್ದಾರೆ.
 
ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಗಲಭೆ ಮಾಡಿಸಿದ್ದು ಆರ್‌ಎಸ್‌ಎಸ್‌ನವರಲ್ಲ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಂದು ತಿರುಗೇಟು ನೀಡಿದ್ದಾರೆ. 
 
ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಂಗಲಾಚಿ ಮಂತ್ರಿ ಸ್ಥಾನವನ್ನು ಪಡೆದುಕೊಂಡರು. ಇದೀಗ ಸ್ವಾತಂತ್ರ್ಯ ಇಲ್ಲದ ಹತಾಶೆಯಲ್ಲಿ ಸೇಡು ತೀರಿಸಿಕೊಳ್ಳಲು ಯೋಜನೆ ರೂಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ