ಕೈ ಅತೃಪ್ತರಿಗೆ ಸಾಂತ್ವನ ಹೇಳಲು ಕರೆ ಮಾಡಿದ್ದೆ, ಪಕ್ಷಕ್ಕೆ ಆಹ್ವಾನಿಸಿಲ್ಲ: ಬಿ.ಎಸ್.ಯಡಿಯೂರಪ್ಪ

ಗುರುವಾರ, 23 ಜೂನ್ 2016 (16:48 IST)
ಕಾಂಗ್ರೆಸ್ ಅತೃಪ್ತರಿಗೆ ಸಾಂತ್ವನ ಹೇಳಲು ಕರೆ ಮಾಡಿದ್ದೆ. ಆದರೆ, ಯಾರನ್ನು ಪಕ್ಷಕ್ಕೆ ಬರುವಂತೆ ಆಹ್ವಾನಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ವಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಬುಗಿಲೆದಿದೆ. ಆದರೆ, ಬಿಜೆಪಿ ಇದರ ಲಾಭವನ್ನು ಪಡೆದುಕೊಳ್ಳಲು ಮುಂದಾಗಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಭಿನ್ನಮತ ಶಾಸಕರನ್ನು ನಾನು ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ ಎಂದು ತಿಳಿಸಿದ್ದಾರೆ. 
 
ಸಂಪುಟ ಪುನರ್‌ರಚನೆ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಸಂಪುಟ ಪುನರ್‌ರಚನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಭಿನ್ನಮತದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತವೆ. ಕೂಡಲೇ ಸರಕಾರ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 
ಈ ಸಂದರ್ಭದಲ್ಲಿ ಯಾವುದೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅದೆಲ್ಲಾ ಚುನಾವಣೆ ನಡೆಯುವ 6 ತಿಂಗಳ ಮುಂಚೆ ಮಾತ್ರ ನಡೆಯುತ್ತದೆ ಎಂದು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ